ಕುತೂಹಲ ಕೆರಳಿಸಿದ ಅಮಿತ್ ಶಾ ಪ್ರತ್ಯೇಕ ಸಭೆ

ಬೆಂಗಳೂರು, ಜ.17- ಸಚಿವ ಸಂಪುಟ ವಿಸ್ತರಣೆ ಗೊಂದಲ ಹಾಗೂ ಸಿಡಿ ವಿವಾದ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಕೋರ್ ಕಮಿಟಿ ವಿಶೇಷ ಸಭೆ ನಂತರ ಅಮಿತ್ ಷಾ ಆಯ್ದ ನಾಯಕರ ಜತೆ ಪ್ರತ್ಯೇಕ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಪಕ್ಷದ ಪ್ರಮುಖರ ಕೋರ್ ಕಮಿಟಿ ಸಭೆ ನಡೆಯಿತು.ಸಭೆಯಲ್ಲಿ ಪ್ರಮುಖವಾಗಿ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಿತು.

ರಾಜ್ಯ ನಾಯಕರಿಂದ ಪಕ್ಷದ ಸಂಘಟನೆ ಹಾಗೂ ಮುಂಬರುವ ಉಪಚುನಾವಣೆ ಬಗ್ಗೆ ಅಮಿತ್ ಷಾ ಮಾಹಿತಿ ಪಡೆದರು. ಸದ್ಯದಲ್ಲೇ ನಡೆಯಬಹುದಾದ ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ಚರ್ಚೆ ಮಾಡಿದರು.

ಸಭೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ನಿರ್ಗಮಿಸಿದರು.

ಸಿಎಂ ನಿರ್ಗಮನದ ನಂತರ ಅಮಿತ್ ಷಾ ತಮ್ಮ ಕೊಠಡಿಯಲ್ಲಿ ನಾಲ್ವರು ಬಿಜೆಪಿ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದರು. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾಹಿತಿ ಕಲೆಹಾಕಿದರು.

ಸಂಪುಟ ಪುನಾರಚನೆ ನಂತರ ರಾಜ್ಯದಲ್ಲಿ ವ್ಯಾಪಕ ಚರ್ಚೆ ನಡೆಯಿತ್ತಿರುವ ಸಿಡಿ ವಿವಾದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಸಿಡಿ ಎನ್ನಲಾಗುತ್ತಿರುವ ಕಾರಣ ಸಿಎಂ ನಿರ್ಗಮನದ ನಂತರ ಈ ಕುರಿತು ಪ್ರತ್ಯೇಕ ಸಭೆ ನಡೆಸಲಾಯಿತು ಎನ್ನಲಾಗಿದೆ.

error: Content is protected !!
satta king chart