fbpx

ಕೋವಿಡ್ ಗುಣಮುಖರಾದವರಲ್ಲಿ ಮತ್ತೆ ಸೋಂಕು: ಲಸಿಕೆ ಪಡೆದ 854 ಮಂದಿಗೆ ಕೊರೋನಾ

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಬಂದು ಗುಣಮುಖರಾದವರಲ್ಲಿ ಮತ್ತೆ ಸೋಂಕು ಕಾಣಿಸಿಕೊಳ್ಳುತ್ತಿರುವುದು ಒಂದೆಡೆ ಆತಂಕಕ್ಕೆ‌ ಕಾರಣವಾಗುತ್ತಿದ್ದರೆ, ಮತ್ತೊಂದೆಡೆ ಲಸಿಕೆ ಪಡೆದವರಲ್ಲೂ ಸೋಂಕು ಪತ್ತೆಯಾಗುತ್ತಿದೆ.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಲಸಿಕಾ ಅಧಿಕಾರಿ ಡಾ.ಗೋಪಿನಾಥ್ ಅವರು ಈ ವಿಷಯ ದೃಢಪಡಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಬಂದವರಲ್ಲಿಯೂ ಸಹ ಮತ್ತೆ ಪಾಸಿಟಿವ್ ಬರುತ್ತಿದೆ. ಆದ್ದರಿಂದ ಕಡ್ಡಾಯವಾಗಿ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಲಸಿಕೆ ನೀಡುವ ಗುರಿ ಸಾಧಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಲಸಿಕೆ ಪಡೆದ 854 ಮಂದಿಗೆ ಸೋಂಕು:

ಜಿಲ್ಲಾ ಲಸಿಕಾ ಅಧಿಕಾರಿ ಡಾ.ಗೋಪಿನಾಥ್ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಲಸಿಕೆ ಪಡೆದವರಲ್ಲಿ 854 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಎರಡನೇ ಬಾರಿ ಲಸಿಕೆ ಪಡೆದವರಲ್ಲಿಯೂ ಪಾಸಿಟಿವ್ ಕಂಡು ಬಂದಲ್ಲಿ ಅಂತಹವರ ಗಂಟಲು, ಮೂಗು ದ್ರವ ಮಾದರಿಯನ್ನು ಮೈಸೂರಿಗೆ ಕಳುಹಿಸಿ ವರದಿ ತರಿಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಸಮುದಾಯ ಆರೋಗ್ಯ ಅಧಿಕಾರಿ ಡಾ.ಮಹೇಶ್ ಅವರು ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಲಸಿಕಾ ಪ್ರಮಾಣ ಉತ್ತಮವಾಗಿದ್ದು, 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಗಡಿ ಭಾಗದ ಗ್ರಾಮಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವೆಂಕಟೇಶ್ ಅವರು ಹೇಳಿದ್ದಾರೆ.

ಕಳೆದ ಹತ್ತು ದಿನದಲ್ಲಿ 36,519 ಮಂದಿ ಪರೀಕ್ಷೆ ಮಾಡಲಾಗಿದ್ದು, ಇವರಲ್ಲಿ 636 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 6 ಜನರು ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಗ್ರಾಮ ಮಟ್ಟದಲ್ಲಿ ಮಾಹಿತಿ ಶಿಕ್ಷಣ ಕಾರ್ಯಕ್ರಮ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ. ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಕರಪತ್ರ ಹಂಚುವುದು, ಮಾಹಿತಿ ಶಿಕ್ಷಣ ನೀಡುವುದು ಹೀಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.

error: Content is protected !!