‘ನಮ್ಮ ಗ್ರಾಮ, ನಮ್ಮ ರಸ್ತೆ’ ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ

ಬೆಂಗಳೂರು,ಮಾ.16-ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ಸರ್ಕಾರ ತ್ವರಿತ ಕ್ರಮಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯಲ್ಲಿಂದು ತಿಳಿಸಿದರು.
ಶಾಸಕ ಸುಕುಮಾರ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು ಎರಡು ಲಕ್ಷ ಗ್ರಾಮೀಣ ರಸ್ತೆಗಳಿವೆ. ಇದರಲ್ಲಿ ಈಗಾಗಲೇ ಒಂದೂವರೆ ಲಕ್ಷ ರಸ್ತೆಗೆ ಡಾಂಬರೀಕರಣ ಮಾಡಲಾಗಿದೆ. ಉಳಿದಿರುವ ರಸ್ತೆಗಳಿಗೆ ಹಂತ ಹಂತವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಹೇಳಿದರು.
ಗ್ರಾಮೀಣ ಸಡಕ್ ಯೋಜನೆಯಡಿ ಅನುದಾನದ ಲಭ್ಯತೆ ಮೇಲೆ ರಸ್ತೆಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಗೆ ರಾಜ್ಯ ಸರ್ಕಾರ , ಜಿಲ್ಲಾಪಂಚಾಯತ್ ಹಾಗೂ ವಿವಿಧ ಸಂಸ್ಥೆಗಳಡಿ ರಸ್ತೆಗಳ ಡಾಂಬರೀಕರಣ ಮತ್ತಿತರ ಕಾಮಗಾರಿಗಳನ್ನು ನಡೆಸುತ್ತಿದ್ದೇವೆ. ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನಲ್ಲೂ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಈ ವೇಳೆ ಆನಂದ್ ಮಾಮನಿ ಅವರು, ನನ್ನ ಮತ ಕ್ಷೇತ್ರದಲ್ಲಿ ಕಳೆದ ಐದು ವಷಗಳಿಂದ ರಸ್ತೆಗಳ ಅಭಿವೃದ್ದಿಗೆ ಅನುದಾನ ಬಿಡುಗಡೆಯಾಗಿಲ್ಲ. ಹೀಗಾಗಿ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು.