fbpx

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ

ಕೊಡಗು ಜಿಲ್ಲೆಯಲ್ಲಿ ಆಗಸ್ಟ್, 19 ರಿಂದ ಸೆಪ್ಟೆಂಬರ್, 03 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರ ಸೇರಿದಂತೆ ಈ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಪರೀಕ್ಷೆ ಸಂಬಂಧ ಸರ್ಕಾರ ಹೊರಡಿಸಿರುವ ಕೋವಿಡ್-19 ಸಮುಚಿತ ಮಾರ್ಗಸೂಚಿಯನ್ನು ಪಾಲಿಸುವುದು. ಈ ಆದೇಶವು ಪರೀಕ್ಷೆ ಆರಂಭದ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಕ್ತಾಯದ ಒಂದು ಗಂಟೆ ನಂತರದವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

error: Content is protected !!