ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಿ,ಪ್ರತ್ಯೇಕ ಆರೈಕೆ ಕೇಂದ್ರ ಸ್ಥಾಪಿಸಿ : ಚಾರುಲತಾ ಸೋಮಲ್ ಸೂಚನೆ

ಕೋವಿಡ್ ಮೂರನೇ ಅಲೆ ಎದುರಿಸುವ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ರಕ್ಷಣೆಗೆ ತ್ವರಿತ ಚಿಕಿತ್ಸೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ಅಲೆ ಮುನ್ನೆಚ್ಚರಿಕೆ ಮತ್ತು ಪೂರ್ವಭಾವಿ ಸಿದ್ಧತೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ,ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮಕ್ಕಳಲ್ಲಿ ಕಂಡು ಬಂದ ಕೋವಿಡ್-19 ಪ್ರಕರಣಗಳು ಮತ್ತು ಆಸ್ಪತ್ರೆಗೆ ದಾಖಲಾಗಿದರ ಬಗ್ಗೆ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಮಕ್ಕಳಲ್ಲಿ ಕೋವಿಡ್ ಪಾಸಿಟಿವಿಟಿ ಕಂಡುಬಂದಲ್ಲಿ ಹೆಚ್ಚಿನ ನಿಗಾವಹಿಸಬೇಕು. ಆಮ್ಲಜನಕ ಅವಶ್ಯವಿರುವ ಮಕ್ಕಳಿಗೆ ತಾಲ್ಲೂಕು ಆಸ್ಪತ್ರೆಗಳಿಗೆ ದಾಖಲು ಮಾಡಿಸಬೇಕು.ಉಳಿದಂತೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಮಕ್ಕಳನ್ನು ದಾಖಲಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಈಗಾಗಲೇ ತೆರೆದಿರುವ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿರುವ ವಿಕಲಚೇತನ ಮಕ್ಕಳ ಕಡೆ ಹೆಚ್ಚಿನ ಗಮನಹರಿಸಬೇಕು. ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಮಕ್ಕಳಿಗೆ ಅಗತ್ಯವಿರುವ ಪೌಷ್ಠಿಕ ಆಹಾರವನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ಲೋಪದೋಷವಾಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಮಕ್ಕಳಿಗಾಗಿಯೇ ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸಿಯು ಹಾಸಿಗೆ ಹಾಗೂ ಆಮ್ಲಜನಕ ಹಾಸಿಗೆಗಳನ್ನು ಕಾಯ್ದಿರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಮಕ್ಕಳ ತಜ್ಞರಾದ ಡಾ.ನವೀನ್ ಕುಮಾರ್ ಅವರು ಮಾತನಾಡಿ ಮೊದಲ ಅಲೆಯಲ್ಲಿ ಶೇ.4 ರಷ್ಟು ಮಕ್ಕಳಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಹಾಗೆಯೇ ಎರಡನೇ ಅಲೆಯಲ್ಲಿ ಶೇ.10 ರಿಂದ 12 ರಷ್ಟು ಮಕ್ಕಳಿಗೆ ಪಾಸಿಟಿವ್ ಕಂಡುಬಂದಿದೆ. ಹಾಗಾಗಿ ಮೂರನೇ ಅಲೆಯಲ್ಲಿ ಹೆಚ್ಚಿನ ಮಕ್ಕಳಿಗೆ ಕೋವಿಡ್ ಪಾಸಿಟಿವ್ ಕಂಡುಬರುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಾಗಿದೆ ಎಂದು ಸಲಹೆ ಮಾಡಿದರು. ಜಿಲ್ಲೆಯ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಕಿರಿಯ ಆರೋಗ್ಯ ಸಹಾಯಕಿಯರಿಗೆ ಮಕ್ಕಳಲ್ಲಿ ಕಂಡು ಬರುವ ಕೋವಿಡ್ ಲಕ್ಷಣಗಳ ಬಗ್ಗೆ ತುರ್ತಾಗಿ ತರಬೇತಿ ನೀಡಿ ಕೋವಿಡ್-19 3ನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಬೇಕಾಗಿದೆ ಎಂದರು. ನ್ಯಾಷನಲ್ ಇನ್ಸ್‍ಟ್ಯೂಷನ್ ಆಫ್ ನ್ಯೂಟ್ರೀಷನ್ ಅವರು ಈಗಾಗಲೇ ಮಕ್ಕಳಿಗೆ ಯಾವ ರೀತಿಯ ಪೌಷ್ಠಿಕ ಆಹಾರವನ್ನು ಒದಗಿಸಬೇಕು ಎಂಬುದರ ಬಗ್ಗೆ ಮಾರ್ಗಸೂಚಿಯನ್ನು ನೀಡಿದ್ದು, ಅದೇ ರೀತಿಯಲ್ಲಿ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಬಹುದಾಗಿದೆ ಎಂದು ಡಾ.ನವೀನ್ ಅವರು ಸಲಹೆ ಮಾಡಿದರು. ಡಾ.ಮಹೇಶ್ ಅವರು ಮಾತನಾಡಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಕಿರಿಯ ಆರೋಗ್ಯ ಸಹಾಯಕರು ದಿನಕ್ಕೊಮ್ಮೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. ಮಕ್ಕಳಿಗಾಗಿಯೇ ಕೋವಿಡ್ ಆಸ್ಪತ್ರೆಯಲ್ಲಿ 50 ಹಾಸಿಗೆಗಳನ್ನು ಕಾಯ್ದಿರಿಸಿಕೊಳ್ಳಬೇಕಾಗಿದೆ ಎಂದು ಅವರು ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮಾತನಾಡಿ ಕೋವಿಡ್ ಪಾಸಿಟಿವ್ ಬಂದ ಮಕ್ಕಳ ಜೊತೆ ಅವರ ಪೋಷಕರು ಇರಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮಕ್ಕಳ ಜೊತೆ ಆಸ್ಪತ್ರೆಯಲ್ಲಿ ಇರುವ ಪೋಷಕರಿಗೆ ಪಿಪಿ ಕಿಟ್ ನೀಡಲು ವ್ಯವಸ್ಥೆ ಮಾಡಿಕೊಳ್ಳಬೇಕಿದೆ ಎಂದರು.

ಕೋವಿಡ್ ಆರೈಕೆ ಕೇಂದ್ರದಲ್ಲಿ ದಾಖಲಾಗುವ ಮಕ್ಕಳ ಪೋಷಕರಿಗೆ ಆರೈಕೆ ಕೇಂದ್ರದಲ್ಲಿಯೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಪೋಷಕರು ಇರಲು ವ್ಯವಸ್ಥೆ ಮಾಡಬೇಕು ಎಂದು ಅವರು ಸಲಹೆ ಮಾಡಿದರು.

error: Content is protected !!