ರಾಜ್ಯದಲ್ಲಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು ಪರಿಷ್ಕೃತ ಮಾರ್ಗಸೂಚಿ

· ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಪಾಸಿಟಿವಿಟಿ ದರವೂ ಹೆಚ್ಚಾಗಿದೆ.

· ರಾಜ್ಯ ಸರ್ಕಾರವು ಕೋವಿಡ್ 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು.

· ಆದರೆ ಇದೀಗ ಸೋಂಕು ಹರಡುವುದನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ.

· ಹೊಸ ಮಾರ್ಗಸೂಚಿಯು ಮೇ 10ರ ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯ ವರೆಗೆ ಜಾರಿಯಲ್ಲಿರಲಿದೆ.

· ಈ ಅವಧಿಯಲ್ಲಿ ಬಸ್, ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚರಿಸಲಿವೆ.

· ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಸಂಚರಿಸಲು ಅವಕಾಶವಿದೆ.

· ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು ನಡೆಯುವುದಿಲ್ಲ.

· ಹೋಟೆಲ್ ಗಳು, ರೆಸ್ಟೋರೆಂಟ್ ಗಳು ಮತ್ತು ಆಹಾರ ಮಳಿಗೆಗಳು ಪಾರ್ಸೆಲ್ ಹಾಗೂ ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.

· ಸಿನೆಮಾ ಹಾಲ್ ಗಳು, ಶಾಪಿಂಗ್ ಮಾಲ್ ಗಳು, ಜಿಮ್ನೇಸಿಯಂಗಳು, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್ ಗಳು, ಕ್ಲಬ್ ಗಳು, ಥಿಯೇಟರ್ ಗಳು, ಬಾರ್ ಗಳು ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.

· ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ.

· ಎಲ್ಲ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

· ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸಲಿವೆ.

· ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳಿಗೆ ಅವಕಾಶ ನೀಡಲಾಗುವುದು.

· ಎಲ್ಲ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.

· ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು.

· ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ.

· ಈ ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತು ಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್ ಗಳು ಹಾಗೂ ಇತರ ಪ್ರಯಾಣಿಕರ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

· ಆಹಾರ ಸಾಮಗ್ರಿ, ದಿನಸಿ ವಸ್ತುಗಳು, ಹಣ್ಣು ಮತ್ತು ತರಕಾರಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ತೆರೆಯಲು ಅನುಮತಿಸಿದೆ. ಹಾಲಿನ ಬೂತ್ಗಳು ಹಾಗೂ ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶವಿದೆ.

· ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ. ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.

· ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.

· ಐಟಿ ಮತ್ತು ಐಟಿಇಎಸ್ ಕಂಪೆನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದ್ದು, ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.

· ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸಬಹುದು.

· ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು.

· ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕಗಳಿಗೆ ಅನುಮತಿ ನೀಡಲಾಗುವುದು.

· ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆಗಳಿಗೆ ಹಾಗೂ ರಸ್ತೆ ಕಾಮಗಾರಿಗಳಿಗೆ ಅನುಮತಿ ನೀಡಲಾಗುವುದು.

· ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.

· ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ.

error: Content is protected !!