ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ

ಜಿಲ್ಲಾಡಳಿತ ವತಿಯಿಂದ ಆಗಸ್ಟ್, 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸೋಮವಾರ ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಕಳೆದ ಬಾರಿ ಕೋವಿಡ್-19 ಹಿನ್ನೆಲೆ ಸಾಂಸ್ಕøತಿಕ ಕಾರ್ಯಕ್ರಮಗಳು ಇರಲಿಲ್ಲ. ಹಾಗೆಯೇ ವಿದ್ಯಾರ್ಥಿಗಳು ಪಾಲ್ಗೊಂಡಿರಲಿಲ್ಲ. ಈ ಬಾರಿ ಕೋವಿಡ್-19 ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹಾಗೂ ಶಾಲೆ ಆರಂಭವಾಗದಿರುವ ಹಿನ್ನೆಲೆ, ಕಳೆದ ಬಾರಿಯಂತೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು.
ಸ್ವಾಗತ, ಧ್ವಜಾರೋಹಣ, ವೇದಿಕೆ, ಸಾಂಸ್ಕøತಿಕ, ಕವಾಯುತು, ಉಪಾಹಾರ, ಭಾಷಣ, ಬಹುಮಾನ ವಿತರಣೆ ಹೀಗೆ ಹಲವು ಉಪ ಸಮಿತಿಗಳು ತಮ್ಮ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಚರಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ವಿವಿಧ ಉಪ ಸಮಿತಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಲಹೆ ಮಾಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್ ಅವರು ಸ್ವಾತಂತ್ರ್ಯೋತ್ಸವ ‘ಅಮೃತ ಮಹೋತ್ಸವ’ ಪ್ರಯುಕ್ತ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
ಆ ದಿಸೆಯಲ್ಲಿ ಆಗಸ್ಟ್, 05 ರಂದು ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂನಲ್ಲಿರುವ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸುವುದು ಜೊತೆಗೆ ಗಿಡ ನೆಡುವ ಕಾರ್ಯಕ್ರಮ, ಆಗಸ್ಟ್, 20 ರಂದು ಗುಡ್ಡೆಮನೆ ಅಪ್ಪಯ್ಯಗೌಡ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವುದು ಹಾಗೂ ಗಿಡ ನೆಡುವುದು, ಆಗಸ್ಟ್, 25 ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವುದು ಹಾಗೂ ಗಿಡ ನೇಡುವುದು ಜೊತೆಗೆ ಸ್ವಚ್ಛತಾ ಕಾರ್ಯ ಕೈಗೊಳ್ಳುವುದು ಹೀಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಅವರು ಶಾಲೆ ಆರಂಭವಾಗದಿರುವುದರಿಂದ ಕಳೆದ ಬಾರಿಯಂತೆ ಶಿಕ್ಷಕರಿಂದ ರಾಷ್ಟ್ರಗೀತೆ, ನಾಡಗೀತೆ, ರೈತಗೀತೆ ಏರ್ಪಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಪೊಲೀಸ್ ಇನ್ಸ್ಪೆಕ್ಟರ್ ರಾಚಯ್ಯ ಅವರು ಪೆರೇಡ್ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಚಂದನ್, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಪೌರಾಯುಕ್ತರಾದ ರಾಮದಾಸ್ ಅವರು ಹಲವು ಮಾಹಿತಿ ನೀಡಿದರು. ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್, ನಾನಾ ಇಲಾಖೆ ಅಧಿಕಾರಿಗಳು ಇದ್ದರು.