ಹಿರಿಯ ನಾಗರಿಕರ ಸಪ್ತಾಹದ ಪ್ರಯುಕ್ತ ಜಾಥಾ
ಮಡಿಕೇರಿ ಸೆ.26 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಕಾರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಹಿರಿಯ ನಾಗರಿಕರ ಸಪ್ತಾಹ ಅಂಗವಾಗಿ ಜಾಥಾಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಸೋಮವಾರ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ ಹಿರಿಯ ನಾಗರಿಕರಿಗೆ ಸರ್ಕಾರದಿಂದ ಪಿಂಚಣಿ ಸೌಲಭ್ಯ ದೊರೆಯಲಿದ್ದು, ಈ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಅವರು ಮಾತನಾಡಿ ಹಿರಿಯ ನಾಗರಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಜೀವನ ನಡೆಸುವಂತಾಗಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಮಲ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 18 ಸಾವಿರ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಗಿದೆ ಎಂದು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೊರಟ ಜಾಥ ನಗರಸಭೆವರೆಗೆ ನಡೆಯಿತು. ನಂತರ ಕಾವೇರಿ ಕಲಾಕ್ಷೇತ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಜರುಗಿತು. 75 ಕ್ಕೂ ಹೆಚ್ಚು ಹಿರಿಯ ನಾಗರಿಕರು ಜಾಥದಲ್ಲಿ ಪಾಲ್ಗೊಂಡಿದ್ದರು, ಅಕ್ಟೋಬರ್ 01 ರಂದು ನಡೆಯುವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎನ್.ಮಂಜುನಾಥ್, ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳು ಇತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.