fbpx

ದಿ. ದೇವರಾಜ ಅರಸರ ಜನ್ಮ ದಿನವನ್ನು ಆ.20ರಿಂದ ಮೂರು ದಿನ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ

ಮಡಿಕೇರಿ ಆ.16: -ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯನ್ನು ಸರ್ಕಾರದ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿ ವಿಶಿಷ್ಟ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಹಿಂದುಳಿದ ವರ್ಗಗಳ ವಿವಿಧ ಕಾಯಕ ಸಮುದಾಯದವರ ಮೂಲ ಕಸುಬುಗಳನ್ನು ಜನರಿಗೆ ಪರಿಚಯಿಸುವಂತಾಗಬೇಕು. ಹಿಂದುಳಿದ ವರ್ಗಗಳ ವಿವಿಧ ಕಾಯಕ ಸಮುದಾಯದವರಿಗೆ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ಮಾಹಿತಿ ನೀಡಿ ಈ ಬಾರಿ ಮೂರು ದಿನಗಳ ಕಾಲ ಕಾರ್ಯಕ್ರಮ ಏರ್ಪಡಿಸಬೇಕಿದೆ. ಆಗಸ್ಟ್, 20 ರಂದು ಡಿ.ದೇವರಾಜ ಅರಸು ಅವರು ಜನ್ಮ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಜೊತೆಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಧಾನ ಮಾಡಬೇಕಿದೆ. ವಿವಿಧ ಕಾಯಕ ಸಮುದಾಯದ ಬಡಗಿ, ನೇಕಾರ, ಕಂಬಾರ, ಕುಂಬಾರ, ವಿಶ್ವಕರ್ಮ ಮುಂತಾದ ಕುಲಕಸುಬುದಾರರು ತಯಾರಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಮಾಡಬೇಕಿದೆ. ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಪ್ರಾತ್ಯಕ್ಷಿಕೆ ನೀಡಲು ಕನಿಷ್ಠ 15 ಮಳಿಗೆ ತೆರೆಯಬೇಕಿದೆ ಎಂದು ಅವರು ಹೇಳಿದರು.

ಆಗಸ್ಟ್, 21 ರಂದು ಜಿಲ್ಲಾ ಮಟ್ಟದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕಿದೆ. ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ಯೋಗ ಹಾಗೂ ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಬೇಕಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣೆ ಮಾಡಬೇಕಿದೆ ಎಂದು ಮಂಜುನಾಥ್ ಅವರು ಮಾಹಿತಿ ನೀಡಿದರು.

ಆಗಸ್ಟ್, 22 ರಂದು ಶಾಲಾ ಮಕ್ಕಳಿಗೆ ಅರಣ್ಯದ ಮಹತ್ವದ ಬಗ್ಗೆ ತಿಳುವಳಿಕೆ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಜೊತೆಗೆ ಡಿ.ದೇವರಾಜ ಅರಸು ಅವರ ಛಾಯಾಚಿತ್ರ ಪ್ರದರ್ಶನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸುವಂತಾಗಲು ಅಗತ್ಯ ಸಹಕಾರಕ್ಕೆ ಕೋರಿದರು. ಮಾದಾಪುರ ಕೊಡವ ಸಮಾಜದ ಅಧ್ಯಕ್ಷರಾದ ಮೇದಪ್ಪ, ಕುಂಬಾರ-ಕುಲಾಲ ಸಮಾಜದ ಅಧ್ಯಕ್ಷರಾದ ನಾಣಯ್ಯ, ನೇಕಾರ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾದ ಟಿ.ಕೆ.ಪಾಂಡುರಂಗ, ಭಗೀರಥ-ಉಪ್ಪಾರ ಸಮುದಾಯದ ಪರಮೇಶ್ ಸಾಗರ್, ಬಿಲ್ಲವ ಸಮಾಜದ ಹರೀಶ್, ಮತ್ತಿತರರು ಹಲವು ಸಲಹೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಪೌರಾಯುಕ್ತರಾದ ವಿಜಯ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಧಿಕಾರಿ ಹೊನ್ನೇಗೌಡ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಹಾದೇವಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್(ಮಾದಾಪುರ), ಪ್ರಕಾಶ್(ಕೂಡಿಗೆ), ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಕವಿತಾ, ಶಿವಶಂಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಇತರರು ಇದ್ದರು.

ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಇದೇ ಆಗಸ್ಟ್, 20 ರಂದು ಆಚರಿಸಬೇಕಿದ್ದು, ಆ ನಿಟ್ಟಿನಲ್ಲಿ ಹಿಂದುಳಿದ ಸಮಾಜದವರನ್ನು ಸೇರಿಸಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಮುಂದಾಗುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಸೂಚಿಸಿದರು.

error: Content is protected !!
satta king chart