fbpx

ನಾಳೆ ವಿಶ್ವ ವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿಗಳಿಂದ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಳೆ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡುತ್ತಿರುವುದು ಈ ಬಾರಿಯ ವಿಶೇಷವಾಗಿದೆ.

ಚಾಮುಂಡಿಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 9.45ರಿಂದ 10.05ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಲಾಗುವ ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಹತ್ತು ದಿನಗಳ ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.

ನಾಳೆ ಬೆಳಿಗ್ಗೆ 9ಗಂಟೆಗೆ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಷ್ಟ್ರಪತಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರಮಾಡಿಕೊಳ್ಳಲಿದ್ದಾರೆ. ಬಳಿಕ ರಾಷ್ಟ್ರಪತಿಗಳು ನೇರವಾಗಿ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ.

ಬಳಿಕ ದೇವಾಲಯದ ಪಕ್ಕದ ಆವರಣದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಪ್ರದಾಯದಂತೆ ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಲಾಗುವ ನಾಡದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ನಂತರ 11.15ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಧಾರವಾಡಕ್ಕೆ ರಾಷ್ಟ್ರಪತಿಗಳು ಪ್ರಯಾಣ ಬೆಳೆಸಲಿದ್ದಾರೆ. ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ತೆರಳಲಿದ್ದಾರೆ.

ದಸರಾ ಮಹೋತ್ಸವದ ಜಂಬೂ ಸವಾರಿಗೂ ಸಮಯ ನಿಗದಿಯಾಗಿದ್ದು, ಅ.5ರಂದು ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಮಕರ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ.

ಬಳಿಕ ಮೆರವಣಿಗೆ ಆರಂಭವಾಗಲಿದ್ದು, ಸಂಜೆ 5.7ರಿಂದ 5.18ರೊಳಗೆ ಸಲ್ಲುವ ಮೀನ ಲಗ್ನದಲ್ಲಿ ಅಭಿಮನ್ಯು ಮೇಲೆ ಚಿನ್ನದ ಅಂಬಾರಿಯಲ್ಲಿ ಕಂಗೊಳಿಸುವ ನಾಡ ಅದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ರಾಜವಂಶಸ್ಥರಾದ ಯದುವೀರಕೃಷ್ಣದತ್ತ ಚಾಮರಾಜ ಒಡೆಯರ್,ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮೇಯರ್ ಶಿವಕುಮಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಸಂಜೆ 7.30ಕ್ಕೆ ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಪಂಜಿನ ಕವಾಯತು ನಡೆಯಲಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸುತ್ತಿದ್ದಾರೆ.

error: Content is protected !!
satta king chart